ಬೆಂಗಳೂರು: ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕಿತ್ತಾಡಿ ಕೊಂಡು, ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆ ಮಾಡಲಾಗಿದೆ.
ಡಿ. ರೂಪಾ ಅವರ ಪತಿ, ಐಎಎಸ್ ಅಧಿಕಾರಿ ಮೌನೀಶ್ ಮೌದ್ಗಿಲ್ ಅವರನ್ನೂ ಸಹ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಡಿಪಿಆರ್)ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ನಿನ್ನೆಯಷ್ಟೇ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದ ಸರ್ಕಾರ, ಇಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಹಾಗೂ ಕರಕುಶಲ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ. ರೂಪಾ ಅವರಿಗೆ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿದೆ.
ಮೌನೀಶ್ ಮೌದ್ಗಿಲ್ ಅವರ ವರ್ಗಾವಣೆಯಿಂದ ತೆರವಾದ ಸರ್ವೆ ಮತ್ತು ಲ್ಯಾಂಡ್ ರೆಕಾರ್ಡ್ ಇಲಾಖೆಯ ಆಯುಕ್ತರ ಹುದ್ದೆಗೆ ಅಲ್ಲಿಯೇ ಹೆಚ್ಚುವರಿ ನಿದೇಶಕರಾಗಿದ್ದ ಸಿ.ಎನ್.ಸುಧೀಂದ್ರ ಅವರನ್ನು ನೇಮಿಸಲಾಗಿದೆ.
ಧಾರ್ಮಿಕ ದತ್ತಿ ಇಲಾಖೆಯ ಆಯಕ್ತರಾಗಿದ್ದ ರೋಹಿಣಿ ಸಿಂಧೂರಿ ಅವರ ಸ್ಥಾನಕ್ಕೆ ಬಸವರಾಜೇಂದ್ರ ಎಚ್ ಅವರನ್ನು ನೇಮಕ ಮಾಡಲಾಗಿದ್ದು, ಡಿ.ರೂಪಾ ಅವರ ಸ್ಥಾನಕ್ಕೆ ಭಾರತಿ.ಡಿ ಎಂಬುವವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.